ಹನ್ನೊಂದು ಸಾವಿರ ಹಳ್ಳಿಗಳಲ್ಲಿ ದಲಿತರು ಸತ್ತರೆ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ :: ಮಾರಸಂದ್ರ ಮುನಿಯಪ್ಪ

ಚಿತ್ರದುರ್ಗ: ಕಳೆದ ಒಂದು ವರ್ಷಗಳಿಂದಲೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನಿಲ್ಲಿಸಿರುವುದನ್ನು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತೀವ್ರವಾಗಿ ಖಂಡಿಸಿದರು.
ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷ ದೇಶದಲ್ಲಿ ಸುಮಾರು 60 ಲಕ್ಷ ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದುಕೊಂಡು ಶಿಕ್ಷಣ ಪಡೆಯುತ್ತಿದ್ದರು. ಈಗ ರಾಜ್ಯ ಮತ್ತು ಕೇಂದ್ರ ಸರ್ಕಾರ ಏಕಾಏಕಿ ವಿದ್ಯಾರ್ಥಿವೇತನ ನಿಲ್ಲಿಸಿರುವುದರಿಂದ ಉನ್ನತ ಶಿಕ್ಷಣದಿಂದ ಎಸ್ಸಿ, ಎಸ್ಟಿ. ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಸರ್ಕಾರ ಕೂಡಲೆ ವಿದ್ಯಾರ್ಥಿವೇತನ ಮಂಜೂರು ಮಾಡುವಂತೆ ಒತ್ತಾಯಿಸಿದರು.
ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗನುಗುಣವಾಗಿ ವಿದ್ಯಾಭ್ಯಾಸ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ನ್ಯಾಯಮೂರ್ತಿ ನಾಗಮೋಹನ್‍ದಾಸ್ ವರದಿಯಲ್ಲಿ ಎಸ್ಸಿ.ಗೆ ಶೇ.15 ರಿಂದ 17 ಪರ್ಸೆಂಟ್ ಪರಿಶಿಷ್ಟ ವರ್ಗಕ್ಕೆ ಶೇ.3 ರಿಂದ 7 ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕು. ಕೇಂದ್ರ ಸರ್ಕಾರ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳನ್ನು ಜಾರಿಗೆ ತಂದಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕು. ದೆಹಲಿಯಲ್ಲಿ 709 ದಿನಗಳಿಂದಲೂ ಚಳುವಳಿ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಆಲಿಸುವಷ್ಟು ಪುರುಸೊತ್ತಿಲ್ಲದ ಪ್ರಧಾನಿ ಅದಾನಿ, ಅಂಬಾನಿಯವರಿಗೆ ಅನುಕೂಲವಾಗುವಂತ ಕಾನೂನುಗಳನ್ನು ಜಾರಿಗೆ ತರಲು ಹೊರಟಿದ್ದಾರೆ. ಇವೆಲ್ಲವುಗಳನ್ನು ವಿರೋಧಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಈಗಾಗಲೆ ಪ್ರತಿಭಟನೆ ನಡೆಸಿದ್ದೇವೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇವರುಗಳು ರೈತ ವಿರೋಧಿ ಕಾಯಿದೆಗಳನ್ನು ಬೆಂಬಲಿಸುತ್ತಿದ್ದಾರೆ. ಆಹಾರ ಪದ್ದತಿ ಅವರವರ ಆಚಾರ, ವಿಚಾರಕ್ಕೆ ಸಂಬಂಧಿಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ರಾಜಕಾರಣಿಗಳು, ಮತದಾರರು ಕೆಟ್ಟಿದ್ದಾರೆ, ಇಬ್ಬರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಹನ್ನೊಂದು ಸಾವಿರ ಹಳ್ಳಿಗಳಲ್ಲಿ ದಲಿತರು ಸತ್ತರೆ ಅಂತ್ಯಸಂಸ್ಕಾರಕ್ಕೆ ಜಾಗವಿಲ್ಲ. ಕೂಡಲೆ ಸರ್ಕಾರ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಬೇಕು. ರಾಜ್ಯದಲ್ಲಿ ಕಳೆದ ಮೂವತ್ತು ವರ್ಷಗಳಿಂದಲೂ ಹತ್ತು ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ, ಹಿಂದುಳಿದವರು, ಅಲ್ಪಸಂಖ್ಯಾತರು, ಮೇಲ್ಜಾತಿಯ ಬಡವರು ಬಗರ್‍ಹುಕುಂ ಸಾಗುವಳಿ ಮಾಡುತ್ತಿದ್ದು, ಫಾರಂ 50, 53, 57 ರಲ್ಲಿ ಅರ್ಜಿ ಸಲ್ಲಿಸಿದ್ದು, ತಕ್ಷಣವೇ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನು ನೀಡಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರ, ಬಡವರು, ಮಧ್ಯಮ ವರ್ಗ, ಶ್ರಮಿಕರು, ಕೂಲಿ ಕಾರ್ಮಿಕರು, ರೈತರಿಗೆ ತೊಂದರೆಯುಂಟು ಮಾಡಿದ್ದು, ದಿನನಿತ್ಯದ ವಸ್ತುಗಳ ಬೆಲೆಯನ್ನು ಇಳಿಸಬೇಕೆಂದು ಮಾರಸಂದ್ರ ಮುನಿಯಪ್ಪ ಆಗ್ರಹಿಸಿದರು.
ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ವೆಂಕಟೇಶ್ ಐಹೊಳೆ, ಮಹಾಂತೇಶ್ ಕೂನಬೇವು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

 

Leave a Reply

Your email address will not be published.