ನಿತ್ಯವಾಣಿ,ಚಿತ್ರದುರ್ಗ,ಆಗಸ್ಟ್20:ಮಾಜಿಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸಮಾಜದ ಎಲ್ಲ ವರ್ಗದ ಸಮುದಾಯಗಳನ್ನು ಒಂದು ಗೂಡಿಸುವ ಮೂಲಕ ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೊರಹೊಮ್ಮಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಡಿ.ದೇವರಾಜು ಅರಸು ಅವರು 106ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಉಳುವವನೇ ಭೂಮಿಯ ಒಡೆಯ, ಶಿಕ್ಷಣ, ವಿದ್ಯಾರ್ಥಿವೇತನ, ವಿದ್ಯಾರ್ಥಿ ನಿಲಯ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜೀತಪದ್ಧತಿ ಮುಕ್ತರಾಜ್ಯವಾಗಬೇಕು ಎಂಬ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗಾಗಿ ಅರಸು ಅವರ ಆದರ್ಶ ಮತ್ತು ಮೌಲ್ಯಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆ ಆಚರಣೆ ನಮ್ಮೆಲ್ಲರಿಗೂ ಮಾದರಿ ಜಯಂತಿಯಾಗಬೇಕು. ಅರಸು ರಾಜ್ಯಕಂಡ ಅಪ್ರತಿಮ ರಾಜಕಾರಣಿ. ಸಾಮಾಜಿಕವಾಗಿ ಸಮಾನತೆ ತರುವ ಉದ್ದೇಶವಿಟ್ಟುಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತರುವ ಮೂಲಕ ರಾಜ್ಯದ 80 ಲಕ್ಷ ಜನರನ್ನು ಉಳುವವನೇ ಭೂಮಿಯ ಒಡೆಯರನ್ನಾಗಿ ಮಾಡಲಾಯಿತು. ಅವರೆಲ್ಲರೂ ಕೃಷಿಯ ಮೂಲಕ ಬದುಕನ್ನು ಕಟ್ಟಿಕೊಂಡಿದ್ದಾರೆ. ಅರಸು ಅವರು ರಾಜ್ಯಕ್ಕೆ ಕೊಟ್ಟ ಕೊಡುಗೆಗಳು ಅವಿಸ್ಮರಣಿಯ ಎಂದು ಬಣ್ಣಿಸಿದರು.
ಹಿಂದುಳಿದ ವರ್ಗಗಳ, ದೀನದಲಿತರ ಉದ್ಧಾರಕ್ಕಾಗಿ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ನೆಲೆಗಟ್ಟು ಒದಗಿಸಲು ವಿರೋಧಗಳ ನಡುವೆಯೂ ಹಿಂದುಳಿದ ವರ್ಗಗಳಿಗೆ ಸೌಲಭ್ಯ ಕಲ್ಪಿಸಿದ್ದಾರೆ. ಅರಸು ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆಯನ್ನು ಕೋವಿಡ್-19 ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದರು.
ಅರಸು ಅವರ ಜೀವನ ಮತ್ತು ಸಾಧನೆ ಅಪ್ರತಿಮವಾದದು.ಅವರ ಚಿಂತನೆ, ಅಲೋಚನೆ, ಶೋಷಿತರ ಮೇಲಿನ ಕಳಕಳಿಯಿಂದ ಎಲ್ಲ ಮುಖ್ಯಮಂತ್ರಿಗಳಿಂದ ಪ್ರತ್ಯೇಕಿಸಿ ವಿಶೇಷ ಸ್ಥಾನದಲ್ಲಿ ಕೂರಿಸಲಾಗಿದೆ ಎಂದರು.
ಸಮಾಜದ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಅಂತಹವರಿಗೆ ರಾಜಕೀಯ, ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸಿದ್ದಾರೆ. ಇವರನ್ನು ಮಾನವೀಯತೆಯ ಸಕಾರ ಮೂರ್ತಿ ಎಂದು ಕರೆಯುತ್ತಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು ಎಂಬ ಆಶಯ ಹೊಂದಿದ್ದರು ಎಂದು ಹೇಳಿದರು.
ಕಾರ್ಯಕ್ರಮಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ, ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.