ಹಾಸನ: ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಜಿಲ್ಲೆಯ ಆರು ಶಾಸಕರು ಜ.25ರಂದು ಮುಖ್ಯಮಂತ್ರಿ ಕಚೇರಿ ಕೃಷ್ಣಾ ಎದುರು ನಡೆಸಲು ಉದ್ದೇಶಿಸಿರುವ ಧರಣಿಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಿಗದಿಯಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲೇ ಧರಣಿ ನಡೆಸಲಾಗುವುದು. ಅದೇ ದಿನ ಜಿಲ್ಲಾಧಿಕಾರಿ ಕಚೇರಿ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸುವರು. ನಂತರ ಅಧಿವೇಶನದಲ್ಲೂ ಪ್ರಶ್ನಿಸಲಾಗುವುದು. ಪ್ರತಿಭಟನೆ ಕೈ ಬಿಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದು, ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ರೀತಿ ಹಲವು ಬಾರಿ ಭರವಸೆ ನೀಡಿದ್ದಾರೆ. ಆದರೆ ಅನುದಾನ ಮಾತ್ರ ಬಿಡುಗಡೆಯಾಗಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿ.ಎಂ. ಮೇಲೆ ನಂಬಿಕೆ ಇಲ್ಲ. ಕೋವಿಡ್ ನೆಪ ಹೇಳಿ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲ. ಆದರೆ, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲಾಗಿದೆ. ಇದು ಹೇಗೆ ಸಾಧ್ಯ? ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಕಾಲೇಜಿಗೆ ₹650 ಕೋಟಿ ನೀಡಲಾಗಿದೆ. ಶಾಸಕ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ತಪ್ಪಿದಕ್ಕೆ ಅವರ ಕ್ಷೇತ್ರಕ್ಕೆ ಕೆರೆ ತುಂಬಿಸಲು ₹48 ಕೋಟಿ ನೀಡಲಾಗಿದೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿರುವ ಕಾರಣ ನೂರಾರು ಕೋಟಿ ಅನುದಾನ ನೀಡಲಾಗುತ್ತಿದೆ ಎಂದರು.
ನಿಗಮ ಮಂಡಳಿ ಸ್ಥಾಪಿಸಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಸಕಲೇಶಪುರ ಭಾಗದಲ್ಲಿ ಅಕಾಲಿಕ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು, ಅಡಿಕೆ ಹಾಳಾಗಿದೆ. ಮಳೆಯಿಂದ ಹಾನಿ ಆಗಿರದ ಕ್ಷೇತ್ರಕ್ಕೆ ಅನುದಾನ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಕುಮಾರಸ್ವಾಮಿ ಸರ್ಕಾರದಲ್ಲಿ ಮಂಜೂರಾಗಿದ್ದ ಕಾಮಗಾರಿಗಳಿಗೆ ಬಿಡುಗಡೆ ಆಗಿದ್ದ ಅನುದಾನವನ್ನು ಇತರೆ ಕಾಮಗಾರಿಗಳಿಗೆ ಬಳಸಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಗಳಿದ್ದರೆ ಅದಕ್ಕೆ ತಡೆ ನೀಡಲಿ. ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಾಂಗ್ರೆಸ್, ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ. 2023ರಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ವಿವರಿಸಿದರು.
ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ನೀರಾವರಿ ಇಲಾಖೆಯಲ್ಲಿ ಟೆಂಡರ್ ಆಗಿದ್ದ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದೆ. ಈ ಬಗ್ಗೆ ಸಿ.ಎಂ ಗೆ ಹಲವು ಬಾರಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದರು.