ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡುವೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.
ಮಹಾರಾಷ್ಟ್ರದ ಅಹ್ಮದ್‌ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ.30ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. ಅಲ್ಲದೇ ತಮ್ಮ ಬೆಂಬಲಿಗರು ತಾವಿರುವ ಸ್ಥಳಗಳಲ್ಲೇ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೊದಲೇ ಎಚ್ಚರಿಕೆ ನೀಡಿದ್ದ ಅಣ್ಣಾ ಹಜಾರೆ:
ದೇಶದ ರೈತರ ಆಕ್ರೋಶಕ್ಕೆ ಕಾರಣವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು. ರೈತರರೊಂದಿಗೆ ಸಂಧಾನ ಸಭೆ ನಡೆಸಬೇಕು. ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಜನವರಿಯೊಳಗೆ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.